ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣ ವಚನ ಸ್ವೀಕಾರ; ಏಕನಾಥ್ ಶಿಂಧೆ-ಅಜಿತ್ ಪವಾರ್ ಡಿಸಿಎಂ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಯ ದೇವೇಂದ್ರ ಫಡ್ನವೀಸ್, ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಮಹಾರಾಷ್ಟ್ರ ನೂತನ ಸರ್ಕಾರದ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಡಿಸೆಂಬರ್ 5) ನಡೆಯುತ್ತಿದೆ. ಸಮಾರಂಭಕ್ಕೆ ಒಂದು ದಿನ ಮುಂಚಿತವಾಗಿ, ಅಂದರೆ ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ಸಿಎಂ ಆಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬೈನ ಆಜಾದ್ ಮೈದಾನದಲ್ಲಿ ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ದೇವೇಂದ್ರ ಫಡ್ನವೀಸ್ ಅವರು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಶಿಂಧೆ ಜೊತೆಗೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೂಡಾ ರಾಜ್ಯ ಎರಡನೇ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
ದೇವೇಂದ್ರ ಫಡ್ನವೀಸ್ ಅವರು ತಮ್ಮ ಕ್ಯಾಬಿನೆಟ್ (ಸರ್ಕಾರ ರಚನೆ ಬಳಿಕ) ಸೇರುವಂತೆ ಶಿವಸೇನಾ ನಾಯಕನನ್ನು ಕೇಳಿಕೊಂಡಿದ್ದಾರೆ. “ನಿನ್ನೆ ನಾನು ಏಕನಾಥ್ ಶಿಂಧೆ ಅವರನ್ನು ಭೇಟಿಯಾದೆ. ಈ ಸರ್ಕಾರದಲ್ಲಿ ಅವರು ನಮ್ಮೊಂದಿಗೆ ಇರಬೇಕು ಎಂಬುದು ಮಹಾಯುತಿ ಕಾರ್ಯಕರ್ತರ ಆಶಯವಾಗಿದೆ ಎಂದು ಹೇಳಿದೆ. ಅವರು ನಮ್ಮೊಂದಿಗೆ ಇರುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಮಹಾರಾಷ್ಟ್ರದ ಜನರಿಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ” ಎಂದು ನಿಯೋಜಿತ ಮುಖ್ಯಮಂತ್ರಿ ಹೇಳಿದ್ದಾರೆ.
ಆದರೆ, ಶಿಂಧೆ ಕೂಡಾ ಪ್ರಮಾಣವಚನ ಸ್ವೀಕರಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಸಂಜೆ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದರು. ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲು ಬಯಸಿದ್ದರು. ಆದರೆ, ರಾಜ್ಯ ವಿಧಾನಸಭೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾದ ಬಿಜೆಪಿ ಅವರ ಬೇಡಿಕೆಗೆ ಮಣಿಯಲು ನಿರಾಕರಿಸಿತು. ಹೀಗಾಗಿ ಶಿಂಧೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಘೋಷಿಸಿದರು.
ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಈ ಹಿಂದೆ ಹಲವಾರು ದಿನಗಳ ಕಾಲ ಥಾಣೆಗೆ ತೆರಳಿದ್ದ ಶಿಂಧೆ, ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಊಹಾಪೋಹಗಳಿಗೆ ಕಾರಣವಾಗಿದ್ದರು. ಮಂಗಳವಾರ ಮುಂಬೈಗೆ ಮರಳಿದ ಬಳಿಕ, ಕೆಲವೊಂದು ಗೊಂದಲಗಳಿಗೆ ತೆರೆ ಬಿದ್ದಿದೆ.
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ರಚಿಸುವ ಸಲುವಾಗಿ ಹಕ್ಕು ಮಂಡಿಸಲು ಅವರು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾದರು. ಫಡ್ನವೀಸ್ ಅವರಿಗೆ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಾಥ್ ನೀಡಿದರು.
ನರೇಂದ್ರ ಮೋದಿ ಭಾಗಿ
ಮುಂಬೈನಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡಾ ಭಾಗವಹಿಸಲಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಇಂದು ಸಂಜೆ 5:30ಕ್ಕೆ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂದು ಯಾರು ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದನ್ನು ಸಂಜೆಯೊಳಗೆ ಅಂತಿಮಗೊಳಿಸುತ್ತೇವೆ ಎಂದು ಫಡ್ನವೀಸ್ ಹೇಳಿದರು.
ಯಾರಿಗೆ ಎಷ್ಟು ಸ್ಥಾನ
ಮೈತ್ರಿಕೂಟದ ಮೂರು ಪಕ್ಷಗಳ ಪ್ರಮುಖರ ಸಮ್ಮುಖದಲ್ಲಿ ನಡೆದಿರುವ ಮಾತುಕತೆಯ ಪ್ರಕಾರ ಬಿಜೆಪಿಗೆ 20 ರಿಂದ 22 ಸಚಿವ ಸ್ಥಾನಗಳಿಗೆ ಅವಕಾಶ ಸಿಗಲಿದೆ. ಏಕನಾಥ್ ಶಿಂಧೆ ಅವರ ಪಕ್ಷಕ್ಕೆ 12 ಸ್ಥಾನಗಳು ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣಕ್ಕೆ 9 ರಿಂದ 10 ಸಚಿವ ಸ್ಥಾನಗಳನ್ನು ನೀಡಬಹುದು. ಆದರೆ ಖಾತೆ ವಿಚಾರವಾಗಿಯೂ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.