Health minister covid meeting: ಕೋವಿಡ್ ಪರಿಸ್ಥಿತಿ ಪರಾಮರ್ಶಿಸಿದ ಆರೋಗ್ಯ ಸಚಿವರು; ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ
“ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಇಂದು ಚರ್ಚೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಕೋವಿಡ್ ಇನ್ನೂ ಮುಗಿದಿಲ್ಲ. ಹೀಗಾಗಿ ನಾನು ಎಲ್ಲರನ್ನೂ ಎಚ್ಚರದಿಂದಿರುವಂತೆ ಮತ್ತು ದೇಶದಲ್ಲಿ ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ” ಎಂದು ಮಾಂಡವಿಯಾ ಹೇಳಿದ್ದಾರೆ.
ಚೀನಾದಲ್ಲಿ ಕೋವಿಡ್ ಆರ್ಭಟ ಮತ್ತೆ ಆರಂಭವಾಗಿರುವ ಬೆನ್ನಲ್ಲೇ ವಿವಿಧ ರಾಷ್ಟ್ರಗಳು ಎಚ್ಚೆತ್ತುಕೊಂಡಿವೆ. ಈ ನಡುವೆ ಭಾರತದಲ್ಲೂ ಸರ್ಕಾರದ ಮಟ್ಟದಲ್ಲಿ ಸಭೆ ಹಾಗೂ ಗಂಭೀರ ಚರ್ಚೆಗಳು ಆರಂಭವಾಗಿವೆ. ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳ ದಿಢೀರ್ ಏರಿಕೆ ಹಿನ್ನೆಲೆಯಲ್ಲಿ ದೇಶದಲ್ಲಿನ ಕೋವಿಡ್-19 ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಈ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಯಾವುದೇ ಹಂತದಲ್ಲೂ ಕೋವಿಡ್ ಅಪಾಯ ಎದುರಾಗಬಹುದು. ಹೀಗಾಗಿ ಜಾಗರೂಕರಾಗಿರಿ. ಅಲ್ಲದೆ ದೇಶಾದ್ಯಂತ ಕಣ್ಗಾವಲು ಬಲಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
“ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಇಂದು ಚರ್ಚೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಕೋವಿಡ್ ಇನ್ನೂ ಮುಗಿದಿಲ್ಲ. ಹೀಗಾಗಿ ನಾನು ಎಲ್ಲರನ್ನೂ ಎಚ್ಚರದಿಂದಿರುವಂತೆ ಮತ್ತು ದೇಶದಲ್ಲಿ ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ” ಎಂದು ಮಾಂಡವಿಯಾ ಹೇಳಿದ್ದಾರೆ.
ಆರೋಗ್ಯ ಕಾರ್ಯದರ್ಶಿಗಳು, ಔಷಧೀಯ ಇಲಾಖೆ, ಜೈವಿಕ ತಂತ್ರಜ್ಞಾನ ಇಲಾಖೆ, ಆಯುಷ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)ಯ ಮಹಾನಿರ್ದೇಶಕ ರಾಜೀವ್ ಬಹ್ಲ್, NITI ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ ವಿ ಕೆ ಪಾಲ್ ಮತ್ತು ಎನ್‌ಟಿಎಜಿಐ(NTAGI) ಅಧ್ಯಕ್ಷ ಡಾ. ಎನ್ ಕೆ ಅರೋರಾ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಜಪಾನ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಚೀನಾದಲ್ಲಂತೂ ಆಸ್ಪತ್ರೆ ಹಾಗೂ ಸ್ಮಶಾನಗಳು ಭರ್ತಿಯಾಗುತ್ತಿವೆ. ಇಂತಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಚ್ಚರ ವಹಿಸುವಂತೆ ತಿಳಿಸಿದೆ.
ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್‌ಗಳಿಗೆ ಪ್ರತಿದಿನ ಕಳುಹಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಪ್ರಾಥಮಿಕವಾಗಿ ಕೆಲ ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎನ್ನಲಾಗಿದ್ದು, ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳು ಮತ್ತು ಕೋವಿಡ್‌ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ಖಚಿತಪಡಿಸಿವೆ.
ಮತ್ತೊಂದೆಡೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್ ಹಾಗೂ ಹೊರ ರೂಪಂತರ ವೈರಸ್ ಬಗೆಗೆ ನಿಗಾ ವಹಿಸಲು ಹೇಳಿದ್ದಾರೆ. ದೇಶದಲ್ಲಿ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಇಂತಹ ಕ್ರಮಗಳು ಅನುವು ಮಾಡಿಕೊಡುತ್ತದೆ ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ನಡುವೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸುವಂತೆ ರಾಹುಲ್ ಗಾಂಧಿ ಅವರಿಗೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದು ತಿಳಿಸಿದ್ದಾರೆ. ಈ ಪ್ರತ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಗುರಿಯಾಗಿಸಲು ಮಾತ್ರ ಎಂದು ಪಕ್ಷ ಹೇಳಿದೆ.