Breaking News: ಅಯೋಧ್ಯ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಧಾನ ಅರ್ಚಕರಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್ ಇಂದು (ಫೆಬ್ರುವರಿ 12) ನಿಧನರಾಗಿದ್ದಾರೆ.

ನವದೆಹಲಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕರಾಗಿದ್ದ ಸತ್ಯೇಂದ್ರ ದಾಸ್ ಇಂದು (ಫೆಬ್ರುವರಿ 12) ಬೆಳಿಗ್ಗೆ ನಿಧನರಾಗಿದ್ದಾರೆ. ಇವರು ಪಾರ್ಶ್ವವಾಯುವಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.
85 ವರ್ಷದ ಸತ್ಯೇಂದ್ರ ದಾಸ್ ಭಾನುವಾರ (ಫೆಬ್ರುವರಿ 9) ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಇವರನ್ನು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (SGPGI) ನರವಿಜ್ಞಾನ ವಿಭಾಗದ ಐಸಿಯುಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಅಯೋಧ್ಯೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಸಂಜಯ್ ಗಾಂಧಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಲಕ್ನೋದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯೇಂದ್ರ ದಾಸ್ ಅವರನ್ನು ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಸತ್ಯೇಂದ್ರ ದಾಸ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದರು.
ಡಿಸೆಂಬರ್ 6, 1992 ರಂದು ಬಾಬರಿ ಮಸೀದಿ ಧ್ವಂಸಕ್ಕೆ ಮುಂಚಿನಿಂದಲೂ ದಾಸ್ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿದ್ದರು. ನಿರ್ವಾಣಿ ಅಖಾಡದ ಸದಸ್ಯರಾಗಿರುವ ಅವರು 20 ನೇ ವಯಸ್ಸಿನಲ್ಲಿ ಆಧ್ಯಾತ್ಮಿಕ ಮಾರ್ಗವನ್ನು ಸ್ವೀಕರಿಸಿದರು.
