Gautam Gambhir: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ ಪಕ್ಷ ತೊರೆದ ಸಂಸದ ಗೌತಮ್ ಗಂಭೀರ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gautam Gambhir: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ ಪಕ್ಷ ತೊರೆದ ಸಂಸದ ಗೌತಮ್ ಗಂಭೀರ್

Gautam Gambhir: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ ಪಕ್ಷ ತೊರೆದ ಸಂಸದ ಗೌತಮ್ ಗಂಭೀರ್

ಲೋಕಸಭೆ ಚುನಾವಣೆ ಸಮೀಪದಲ್ಲೇ ಇದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಭೆ ನಡೆಯುತ್ತಿರುವಾಗಲೇ, ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಪಕ್ಷ ತೊರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ಚುಟುಕಾಗಿ ಪಕ್ಷ ತೊರೆಯುತ್ತಿರುವ ವಿಚಾರ ತಿಳಿಸಿದ್ದಾರೆ. ಯಾಕೆ ಏನು ವಿವರ ಹೀಗಿದೆ.

ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ (ಕಡತ ಚಿತ್ರ)
ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ (ಕಡತ ಚಿತ್ರ) (LM)

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವುದಕ್ಕೂ ಮೊದಲೇ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಪಕ್ಷ ತೊರೆದಿದ್ದಾರೆ. ಕ್ರಿಕೆಟ್ ಬದ್ಧತೆಗಳ ಕಡೆಗೆ ಗಮನಹರಿಸುವುದಕ್ಕಾಗಿ ಸಕ್ರಿಯ ರಾಜಕೀಯದಿಂದ ದೂರ ಸರಿಯುತ್ತಿರುವುದಾಗಿ ಗೌತಮ್ ಗಂಭೀರ್ ಶನಿವಾರ ಘೋಷಿಸಿದ್ದಾರೆ. ಅದೇ ರೀತಿ, 'ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ' ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಹೇಳಿದ್ದಾರೆ.

ಗೌತಮ್‌ ಗಂಭೀರ್‌ ಅವರು 2019 ರ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅರವಿಂದ್ ಸಿಂಗ್ ಲವ್ಲಿ ಮತ್ತು ಎಎಪಿಯ ಅತಿಶಿ ಅವರನ್ನು ಸೋಲಿಸಿದ್ದರು. ಸಕ್ರಿಯ ರಾಜಕಾರಣದಿಂದ ದೂರ ಸರಿಯುತ್ತಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡ ಗಂಭೀರ್, "ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳತ್ತ ಗಮನ ಹರಿಸಲು ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಗೌರವಾನ್ವಿತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ವಿನಂತಿಸಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೂ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜೈ ಹಿಂದ್!" ಎಂದು ಬರೆದುಕೊಂಡಿದ್ದಾರೆ.

ಗೌತಮ್ ಗಂಭೀರ್ ನಡೆ ಅಭಿಮಾನಿಗಳಿಗೆ ಆಘಾತ

ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದ ಗೌತಮ್ ಗಂಭೀರ್ ನಡೆ ಅಭಿಮಾನಿಗಳಿಗೆ ಆಘಾತ ನೀಡಿದೆ. ಅವರ ಟ್ವೀಟ್‌ ಅನ್ನು 10 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು, 2 ಸಾವಿರಕ್ಕೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ.

ಗೌತಮ್ ಗಂಭೀರ್ ಸ್ಥಾನ ತುಂಬುವವರು ಯಾರು?

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಚುನಾವಣಾ ಸಮಿತಿ ಸಭೆ (ಸಿಇಸಿ) ಗುರುವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಸುಮಾರು 17 ರಾಜ್ಯಗಳ ಲೋಕಸಭಾ ಚುನಾವಣಾ ಸ್ಥಾನಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ, 155 ಕ್ಕೂ ಹೆಚ್ಚು ಸ್ಥಾನಗಳಿಗೆ ಸಂಬಂಧಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅದರ ವಿವರಗಳನ್ನು ಮುಂದಿನ ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಶೀಘ್ರದಲ್ಲೇ, ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆಯಿದೆ. ಈಗ ಗೌತಮ್ ಗಂಭೀರ್ ಬದಲಿಗೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ್ ಅಥವಾ ಪಕ್ಷದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ನೇಮಕವಾಗಲಿದ್ದಾರೆ ಎಂದು ಊಹಿಸಲಾಗಿದೆ. ದೆಹಲಿಯ ಏಳು ಸ್ಥಾನಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ನಡೆಯಲಿದೆ.

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.