Odisha News: ಒಡಿಶಾದಲ್ಲಿ ಮತ್ತೊಂದು ದುರಂತ; ಗೂಡ್ಸ್ ರೈಲು ಹರಿದು ನಾಲ್ವರು ಕಾರ್ಮಿಕರು ಸಾವು
Odisha train accident: ಒಡಿಶಾದ ಜಾಜ್‌ಪುರದ ರೋಡ್ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಜಾಜ್‌ಪುರ (ಒಡಿಶಾ): ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ನಡೆದಿದೆ. ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಟ್ರೆಂಡಿಂಗ್ ಸುದ್ದಿ
ಒಡಿಶಾದ ಜಾಜ್‌ಪುರದ ರೋಡ್ ರೈಲು ನಿಲ್ದಾಣದಲ್ಲಿ ಇಂದು (ಜೂನ್ 7, ಬುಧವಾರ) ಘಟನೆ ನಡೆದಿದ್ದು, ಅಪಘಾತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಜಾಜ್‌ಪುರ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಬೋಗಿಗಳ ಕೆಳಗೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದರು.
ಹವಾಮಾನ ವೈಪರೀತ್ಯದಿಂದ ಜೋರಾಗಿ ಗಾಳಿ ಬೀಸಿದ್ದು, ರೈಲು ಚಲಿಸಿದ್ದರಿಂದ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಾಗೂ ಗಾಯಾಳುಗಳು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
ಬಾಲಾಸೋರ್ ದುರಂತ
ಜೂನ್ 2, ಶುಕ್ರವಾರ ಒಡಿಶಾದ ಬಾಲಾಸೋರ್ನಲ್ಲಿ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿತ್ತು. ಭೀಕರ ರೈಲು ಅಪಘಾತದಲ್ಲಿ 288 ಜನರು ಬಲಿಯಾಗಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರ ಪ್ರತಿ ಕುಟುಂಬಕ್ಕೆ ಕೇಂದ್ರ ರೈಲ್ವೆ ಸಚಿವಾಲಯ 10 ಲಕ್ಷ ರೂಪಾಯಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 5 ಲಕ್ಷ ರೂಪಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಒಟ್ಟು 17 ಲಕ್ಷ ಪರಿಹಾರ ಘೋಷಿಸಿದ್ದಾರೆ. ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ.