ಭಾರತ ಅತ್ಯಂತ ಗೌರವಾನ್ವಿತ ನಾಯಕನನ್ನು ಕಳೆದುಕೊಂಡು ದುಃಖಿಸುತ್ತಿದೆ; ಮನಮೋಹನ್ ಸಿಂಗ್ ಬಣ್ಣಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಭಾರತದ ಅತ್ಯಂತ ಗೌರವಾನ್ವಿತ ನಾಯಕನನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ.
ಭಾರತದ ಮಾಜಿ ಪ್ರಧಾನಿ, ಪ್ರಸಿದ್ಧ ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ಸಿಗ ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 26) ದೆಹಲಿಯ ಏಮ್ಸ್ ಆಸ್ಪ್ರತ್ರೆಯಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಆಡಳಿತವನ್ನು ಕೊಂಡಾಡಿದ ಪ್ರಧಾನಿ ಮೋದಿ ಅವರು ಭಾರತವು ಪ್ರತಿಷ್ಠಿತ ನಾಯಕ ಮತ್ತು ಅತ್ಯಂತ ಗೌರವಾನ್ವಿತ ನಾಯಕನನ್ನು ಕಳೆದುಕೊಂಡಿದೆ ಎಂದು ಟ್ವೀಟ್ನಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ.
ಮನಮೋಹನ್ ಸಿಂಗ್ರನ್ನು ಕೊಂಡಾಡಿದ ಮೋದಿ
ಭಾರತ ದೇಶವು ಧೀಮಂತ ನಾಯಕ, ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ ಅವರನ್ನು ಕಳೆದುಕೊಂಡು ದುಃಖಿಸುತ್ತದೆ. ಸಾಮಾನ್ಯ ವ್ಯಕ್ತಿಯಿಂದ ಅರ್ಥಶಾಸ್ತ್ರಜ್ಞರಾಗುವ ತನಕ ಬೆಳೆದ ಅವರು, ಕಷ್ಟದ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ಮೇಲೆತ್ತುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಹಣಕಾಸು ಸಚಿವರಾಗಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅವರು ನಮ್ಮ ದೇಶದ ಆರ್ಥಿಕತೆ ಬೆಳೆಯಲು ಭದ್ರ ಬುನಾದಿ ಹಾಕಿದ್ದರು. ಸಂಸತ್ತಿನಲ್ಲಿ ಅವರೊಂದಿಗಿನ ಕ್ಷಣಗಳು ಈಗಲೂ ಕಣ್ಣಿಗೆ ಕಟ್ಟುವಂತಿವೆ. ಪ್ರಧಾನಿಯಾಗಿ, ಜನರ ಜೀವನವನ್ನು ಸುಧಾರಿಸಲು ಸರ್ವಪ್ರಯತ್ನ ನಡೆಸಿದ್ದ ಧೀಮಂತ ನಾಯಕ ಎಂದು ಕೊಂಡಾಡಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಗುಜರಾತ್ ಸಿಎಂ ಆಗಿದ್ದೆ. ಆಗ ಇಬ್ಬರು ನಿಯಮಿತವಾಗಿ ಸಂಪರ್ಕದಲ್ಲಿದ್ದೆವು. ನಿಯಮಿತವಾಗಿ ಸಂಹವನ ನಡೆಸುತ್ತಿದ್ದೆವು. ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತೇ ನಾವು ಹೆಚ್ಚು ಚರ್ಚೆ ನಡೆಸುತ್ತಿದ್ದೆವು. ಅವರ, ಬುದ್ದಿವಂತಿಕೆ ಪಾಂಡಿತ್ಯ ಮತ್ತು ವಿನಯತೆ ಎಲ್ಲರಿಗೂ ಮಾದರಿ. ರಾಜಕೀಯ ಕ್ಷೇತ್ರದಲ್ಲಿ ಅವರ ಸಾಧನೆಗಳು ಸದಾ ಸ್ಮರಣೀಯ. ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮನಮೋಹನ್ ಸಿಂಗ್ ಅವರೊಂದಿಗಿನ ಚಿತ್ರಗಳನ್ನು ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ.
ಸಿದ್ದರಾಮಯ್ಯ ಸಂತಾಪ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.