ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ: ಸಂಪುಟ ಸಭೆಯಲ್ಲಿ ನಿರ್ಧಾರ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ: ಸಂಪುಟ ಸಭೆಯಲ್ಲಿ ನಿರ್ಧಾರ

ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ: ಸಂಪುಟ ಸಭೆಯಲ್ಲಿ ನಿರ್ಧಾರ

2022 ರಿಂದ ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿ ಜನರಲ್ ಅಸಿಮ್ ಮುನೀರ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರಿಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡಲು ಪಾಕ್‌ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ

ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡುವ ಪ್ರಸ್ತಾಪಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಮಂಗಳವಾರ ಅನುಮೋದನೆ ನೀಡಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದೊಂದಿಗಿನ ಸಂಘರ್ಷದಲ್ಲಿ ಅಸಿಮ್ ಮುನೀರ್ ಅವರ ಕಾರ್ಯನಿರ್ವಹಣೆ ಬಗ್ಗೆ ಪಾಕಿಸ್ತಾನದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದ್ದು, ಅದಾದ ಬಳಿಕ ಅವರಿಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದಾಗ, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆಯಾದರೂ, ತಮ್ಮ ರಾಷ್ಟ್ರೀಯ ಪ್ರತಿಷ್ಠೆಯನ್ನು ರಕ್ಷಿಸಲು ಯಾವುದೇ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಅಸಿಮ್ ಮುನೀರ್ ಘೋಷಿಸಿದ್ದರು. ರಾವಲ್ಪಿಂಡಿಯಲ್ಲಿ ಮಾಡಿದ ಭಾಷಣದಲ್ಲಿ, ಪಾಕಿಸ್ತಾನವು ಈ ಪ್ರದೇಶದಲ್ಲಿ ಮತ್ತು ಅದರಾಚೆಗೆ ಶಾಂತಿಯನ್ನು ಬಯಸುತ್ತದೆ; ಆದಾಗ್ಯೂ, ಪಾಕಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸಿದರೆ, ಪಾಕಿಸ್ತಾನವು ತನ್ನ ರಾಷ್ಟ್ರೀಯ ಪ್ರತಿಷ್ಠೆ ಮತ್ತು ತನ್ನ ಜನರ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪೂರ್ಣ ಶಕ್ತಿಯಿಂದ ಪ್ರತಿಕ್ರಿಯಿಸುತ್ತದೆ ಎಂದು ಅಸಿಮ್ ಹೇಳಿದ್ದರು.

2019ರಲ್ಲಿ ಮುನೀರ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ಮುಖ್ಯಸ್ಥರಾಗಿದ್ದರು. ಅದಾದ ನಂತರ 2022ರ ನವೆಂಬರ್‌ನಲ್ಲಿ ಜನರಲ್ ಖಮರ್ ಜಾವೇದ್ ಬಜ್ವಾ ಅವರ ಸ್ಥಾನಕ್ಕೆ ಜನರಲ್ ಅಸಿಮ್ ಮುನೀರ್ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಅಸಿಮ್ ಮುನೀರ್ 2022 ರಿಂದ ಪಾಕಿಸ್ತಾನದ 11 ನೇ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವೆಂಬರ್ 2024 ರಲ್ಲಿ, ಸೇನಾ ಮುಖ್ಯಸ್ಥರಾಗಿ ಅವರ ಅಧಿಕಾರಾವಧಿಯನ್ನು ಮೂರರಿಂದ ಐದು ವರ್ಷಗಳವರೆಗೆ ವಿಸ್ತರಿಸಲಾಯಿತು. ಇದೀಗ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡಲು ಪಾಕ್‌ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.