ಜನವರಿ 31 ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ; ಫೆ 1ಕ್ಕೆ ಮಧ್ಯಂತರ ಆಯವ್ಯಯ ಮಂಡನೆ
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಕೇಂದ್ರ ಸರ್ಕಾರ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಂಡಿದೆ. ಜನವರಿ 31 ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ.
ದೆಹಲಿ: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ (Interim Budget 2024) ಮೂಹೂರ್ತ ಫಿಕ್ಸ್ ಮಾಡಿದೆ. ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. 17ನೇ ಲೋಕಸಭೆಯ ಕೊನೆಯ ಅಧಿವೇಶನವೂ ಇದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಮಧ್ಯಂತರ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವರು, 17ನೇ ಲೋಕಸಭೆಯ ಕೊನೆಯ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಲೋಕಸಭೆ ಚುನಾವಣೆಯ ಹೊಸತ್ತಿಲಲ್ಲಿರುವ ಕಾರಣ ಬಜೆಟ್‌ನಲ್ಲಿ ಹಲವು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಹೀಗಾಗಿ ಇದನ್ನು ಚುನಾವಣಾ ಬಜೆಟ್ ಆಗಿರಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.