ಮುಡಾ ಹಗರಣ; ಅವರ ಮಕ್ಕಳ ರಕ್ಷಣೆಗಾಗಿ ಬಿಜೆಪಿ ಜೆಡಿಎಸ್ ಪಾದಯಾತ್ರೆ, ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹೈಕಮಾಂಡ್- ವಿಡಿಯೋ
ಬೆಂಗಳೂರು: ಬಿಜೆಪಿ ಜೆಡಿಎಸ್ ನಾಯಕರ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸ್ಪಷ್ಟ ಪಡಿಸಿದರು. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭಾನುವಾರ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಿದ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು, ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಕರ್ನಾಟಕ ರಾಜ್ಯ ಬಿಜೆಪಿಗೆ ಸರ್ಕಾರ ಪತನಗೊಳಿಸುವ ಕರಾಳ ಇತಿಹಾಸವಿದೆ. 2018ರಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ. ಈಗಲೂ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವುದಕ್ಕೆ ಮುಂದಾಗಿದ್ದಾರೆ.
ಜೆಡಿಎಸ್ ನಾಯಕರು ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಕೆಸಿ ವೇಣುಗೋಪಾಲ್ ಟೀಕಿಸಿದರು.
ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಕೆಸಿ ವೇಣುಗೋಪಾಲ್ ವಿವರಿಸಿದರು.